ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ನಾಲ್ಕೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ಮತ್ತೆ ಸಕ್ರಿಯರಾಗಿದ್ದಾರೆ. ತಮ್ಮ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವದಲ್ಲಿ ಮೂರು ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಿರುವುದು ಅವರಿಗೆ ಸಂತಸ ತಂದಿದ್ದು, ಪುತ್ರನಿಗೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಅವರು ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಸುಮಾರು ಮೂವತ್ತು ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದರು.
ಬಿಜೆಪಿ-ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಬೇಕು..!
ಈ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ದೇವೇಗೌಡರು ಪ್ರಚಲಿತ ರಾಜಕೀಯದ ಬಗ್ಗೆ ಹಲವು ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು. ಮುಂದೊಂದು ದಿನ ಉತ್ತಮ ಬಿಜೆಪಿ-ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬುದು ಎಲ್ಲರ ಆಶಯವಾಗಿದೆ. ಕುಮಾರಸ್ವಾಮಿ ಸೇರಿದಂತೆ ಇತರ ನಾಯಕರೊಂದಿಗೆ ಚರ್ಚಿಸಿ ಮುಂಬರುವ ಚುನಾವಣೆಗಳಲ್ಲಿ ಒಟ್ಟಾಗಿ ಹೋರಾಟ ನಡೆಸುವುದಾಗಿ ಹೇಳಿದ ಅವರು, , ಅಮಿತ್ ಶಾ ಹಾಗೂ ದೇವೇಗೌಡರು ಒಟ್ಟಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದರು.
ಸದ್ಯಕ್ಕೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಾತ್ರ ಚರ್ಚಿಸಿದ್ದೇವೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಬಗ್ಗೆ ಮುಂದೆ ವಿಸ್ತೃತವಾಗಿ ಮಾತನಾಡುತ್ತೇವೆ ಎಂದರು. ಕಾಂಗ್ರೆಸ್‌ನಲ್ಲಿನ ಗೊಂದಲ, ನಾಯಕರು ಪದೇ ಪದೇ ದೆಹಲಿಗೆ ತೆರಳಿ ರಾಹುಲ್ ಗಾಂಧಿಯನ್ನು ಭೇಟಿಯಾಗುತ್ತಿರುವುದನ್ನು ನೋಡಿದರೆ ಯಾವ ಕ್ಷಣದಲ್ಲಾದರೂ ಏನು ಬೇಕಾದರೂ ನಡೆಯಬಹುದು ಎಂಬ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಬಸ್‌ಗಳಿಗೆ ಡೀಸೆಲ್ ಹಾಕಲೂ ಆಗದಂತಹ ದುಸ್ಥಿತಿ ಇದೆ, ಸ್ಟಿಂಗ್ ಆಪರೇಷನ್ ಪ್ರಕರಣವನ್ನು ನೀವೇ ನೋಡುತ್ತಿದ್ದೀರಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ತುಘಲಕ್ ಕೈಯಲ್ಲಿ ಪೊಲೀಸರು – ಮಂಗನ ಕೈಯಲ್ಲಿ ಗೃಹ ಇಲಾಖೆ : ಕುಮಾರಸ್ವಾಮಿ
ಈ ಭೇಟಿ ಕೇವಲ ಸೌಜನ್ಯದ ಭೇಟಿಯಲ್ಲ. ಬಿಜೆಪಿಯೊಳಗೆ ವಿಜಯೇಂದ್ರ ಅವರ ನಾಯಕತ್ವದ ಬಗ್ಗೆ ಕೆಲವರಿಂದ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಮಿತ್ರಪಕ್ಷದ ಹಿರಿಯ ನಾಯಕರ ಬೆಂಬಲ ಗಳಿಸುವ ಮೂಲಕ ಪುತ್ರನ ಸ್ಥಾನವನ್ನು ಭದ್ರಪಡಿಸುವುದು ಯಡಿಯೂರಪ್ಪ ಅವರ ಮುಖ್ಯ ಉದ್ದೇಶವಾಗಿ ಕಾಣುತ್ತಿದೆ. ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳಿರುವಾಗಲೇ ಜೆಡಿಎಸ್ ಜೊತೆಗಿನ ಸಂಬಂಧವನ್ನು ಗಟ್ಟಿಗೊಳಿಸುವುದು ಮುಂದಿನ ರಾಜಕೀಯ ಲೆಕ್ಕಾಚಾರದ ಭಾಗವಾಗಿದೆ. ಪರಿಷತ್ ಗೆಲುವಿನಿಂದ ಸಿಕ್ಕಿರುವ ಉತ್ಸಾಹವನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಉಳಿಸಿಕೊಂಡು, ಕಾಂಗ್ರೆಸ್‌ನ ಆಂತರಿಕ ಬಿಕ್ಕಟ್ಟನ್ನು ತಮ್ಮ ಪರವಾಗಿ ಬಳಸಿಕೊಳ್ಳುವ ಕಾರ್ಯತಂತ್ರವನ್ನು ಎನ್‌ಡಿಎ ರೂಪಿಸುತ್ತಿರುವುದು ಸ್ಪಷ್ಟವಾಗಿದೆ.




